ರಾಯಚೂರು: ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ, ಕಾಲೇಜು ಪ್ರಾಂಶುಪಾಲರ ವಿರುದ್ಧ ಅತ್ಯಾಚಾರ, ಕೊಲೆ ಪ್ರಕರಣ
ತಮ್ಮದೆ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲರ ವಿರುದ್ಧ ರಾಯಚೂರು ಪೊಲೀಸರು ದೂರು ದಾಖಲಿಸಿದ್ದಾರೆ
ಲಿಂಗಸುಗೂರಿನ ಖಾಸಗಿ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಕಾಲೇಜು ಪ್ರಾಂಶುಪಾಲ ಮತ್ತು ಹಾಸ್ಟೆಲ್ ವಾರ್ಡನ್ ಕೂಡ ಇವರೇ ಆಗಿದ್ದು, ಪ್ರಾಂಶುಪಾಲರ ವಿರುದ್ಧ ಯುವತಿ ಕುಟುಂಬದವರು ದೂರು ನೀಡಿದ್ದಾರೆ.
ಸಂತ್ರಸ್ತೆಯ ಚಿಕ್ಕಪ್ಪ ನೀಡಿದ ದೂರಿನ ಆಧಾರದ ಮೇಲೆ ರಾಯಚೂರು ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ವರ್ಷದ ಪಿಯುಸಿ ಒದುತ್ತಿದ್ದು, ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದರು. ವಿದ್ಯಾರ್ಥಿನಿಗೆ ಪ್ರಾಂಶುಪಾಲರು ಕಿರುಕುಳ ನೀಡುತ್ತಿದ್ದರು. ಆಕೆಯನ್ನು ಆತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ದೂರಿದ್ದಾರೆ.
ಇದಾದ ಒಂದು ದಿನದ ನಂತರ, ಬಾಲಕಿಯ ಅತ್ಯಾಚಾರ ಮತ್ತು ಕೊಲೆಗೆ ಪ್ರಾಂಶುಪಾಲರೇ ಕಾರಣ ಎಂದು ಆರೋಪಿಸಿ ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಪ್ರಾಂಶುಪಾಲರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆರೋಪಿಯು ಈ ಹಿಂದೆಯೂ ಸಂತ್ರಸ್ತೆಯನ್ನು ತನ್ನ ಕೋಣೆಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದ ಎಂದು ಎಫ್‌ಐಆರ್‌ನಲ್ಲಿ ದೂರಲಾಗಿದೆ. ಪೊಲೀಸರಿಗೆ ದೂರು ನೀಡಿದ ಬಾಲಕಿಯ ಚಿಕ್ಕಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ತಾನು ಒಬ್ಬಂಟಿಯಾಗಿರುವಾಗ ತನ್ನನ್ನು ತನ್ನ ಕೋಣೆಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ತೆ ತನ್ನ ಪೋಷಕರಿಗೆ ಮೂರು ತಿಂಗಳ ಹಿಂದೆಯೇ ದೂರಿದ್ದರು. ಈ ವೇಳೆ ಈ ವರ್ಷ ಮುಗಿದ ನಂತರ ಬೇರೆ ಕಾಲೇಜಿಗೆ ಸೇರಿಸುವುದಾಗಿ ಹೇಳಿದ್ದೇವು ಎಂದು ಮಾಹಿತಿ ನೀಡಿದ್ದಾರೆ.
ಶುಕ್ರವಾರವೂ ಪ್ರಾಂಶುಪಾಲರು ಆಕೆಯನ್ನು ತನ್ನ ಕೋಣೆಗೆ ಕರೆದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. “ಘಟನೆಯ ನಂತರ, ಪ್ರಾಂಶುಪಾಲ ಸ್ಥಳದಿಂದ ಪರಾರಿಯಾಗಿದ್ದಾರೆ. ಇದು ಆತ ತಪ್ಪು ಮಾಡಿದ್ದಾನೆ ಎಂಬುದನ್ನು ಸಾಬೀತುಪಡಿಸುತ್ತದೆ. ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.
ಕಾಲೇಜು ಪ್ರಾಂಶುಪಾಲರ ಮೇಲೆ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ನಮಗೆ ದೂರು ಬಂದಿದೆ. ಸಂತ್ರಸ್ತೆ ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 302 (ಕೊಲೆ) ಮತ್ತು 376 (ಅತ್ಯಾಚಾರ) ಅಡಿಯಲ್ಲಿ ಲಿಂಗಸುಗೂರು ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ” ಎಂದು ರಾಯಚೂರು ಎಸ್ಪಿ ಬಿ ನಿಖಿಲ್ ತಿಳಿಸಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತದೇಹದಲ್ಲಿ ಎಲ್ಲಿಯೂ ಗಾಯದ ಗುರುತು ಪತ್ತೆಯಾಗದ ಕಾರಣ ಪ್ರಾಥಮಿಕವಾಗಿ ಇದು ಕೊಲೆಯಲ್ಲ ಎಂದು ವೈದ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು. ಇನ್‌ಸ್ಪೆಕ್ಟರ್ ನೇತೃತ್ವದ ಪೊಲೀಸ್ ತಂಡ ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಅವರ ಅಡಗುತಾಣದ ಬಗ್ಗೆ ನಮಗೆ
ಖಚಿತ ಸುಳಿವು ಸಿಕ್ಕಿದ್ದು, ರಾತ್ರಿ ಆರೋಪಿಯನ್ನು ಬಂಧಿಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.
ಮೊಹಮ್ಮದ್ ಮುಸ್ತಫಾ tv8kannada ಲಿಂಗಸುಗೂರು