ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ಗಯಳನ್ನು ಉಚಿತವಾಗಿ ನೀಡಲು ಮಾಹೆಯಾನ 1200 ಕೋಟಿ ರೂ.ಗಳ ಅನುದಾನದ ಅಗತ್ಯವಿದೆ. ಪ್ರತಿ ಮನೆಯ ಒಡತಿಗೆ ಮಾಸಿಕ 2000 ರೂ., ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ, ಈ ವರ್ಷ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ 3,000 ರೂ.ಗಳನ್ನು ಹಾಗೂ ಡಿಪ್ಲೊಮಾ ಪಾಸಾದವರಿಗೆ 1500 ರೂ.ಗಳನ್ನು ಯುವನಿಧಿಯಡಿ ನೀಡಲಾಗುವುದು. ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಕರ್ನಾಟಕದ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಇವುಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಸ್ತೃತ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇಂದಿರಾ ಕ್ಯಾಂಟೀನ್ ಗಳ ಮಾಹಿತಿಯನ್ನೂ ಪಡೆಯಲಾಗುತ್ತಿದ್ದು, ಇವುಗಳನ್ನು ಪುನರಾಂಭಿಸಲಾಗುವುದು ಎಂದರು.
ಅಧಿವೇಶನ:
ಇದೇ 22 ರಿಂದ 24 ರವರೆಗೆ ಮೂರು ದಿನಗಳ ಕಾಲ ಅಧಿವೇಶನವನ್ನು ಕರೆಯಲಾಗುವುದು ಎಂದು ಮಾಹಿತಿ ನೀಡಿದ ಮುಖ್ಯಮಂತ್ರಿಗಳು ಜುಲೈ ಮಾಹೆಯಲ್ಲಿ ಆಯವ್ಯಯ ಮಂಡಿಸಲಾಗುವುದು ಎಂದು ತಿಳಿಸಿದರು.
165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಕೆ
ನಮ್ಮ ಹಿಂದಿನ ಅವಧಿಯಲ್ಲಿ ನಮ್ಮ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ನಾವು ಕೊಟ್ಟ ಮಾತಿನಂತೆಯೇ ನಡೆದಿದ್ದೇವೆ. ನಾವು ನೀಡಿದ ಭರವಸೆಗಳನ್ನು ಈಡೇರಿಸುವ ಜೊತೆಗೆ ಇಂದಿರಾ ಕ್ಯಾಟೀನ್, ಸಾಲಮನ್ನಾ, ವಿದ್ಯಾಸಿರಿ, ಶೂ ಭಾಗ್ಯ, ಪಶು ಭಾಗ್ಯ ಸೇರಿದಂತೆ ಹೊಸ 30 ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.